ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರಿಂದ ಕಾರ್ಮಿಕರ ಆರೋಗ್ಯ ರಕ್ಷಣೆ ಆಗುತ್ತಿದೆ. ಕಾರ್ಮಿಕರ ಆರೋಗ್ಯ ರಕ್ಷಣೆಯನ್ನೇ ಮುಖ್ಯ ಗುರಿಯಾಗಿಟ್ಟುಕೊಂಡು ಅವರಿಗೆ ಆರೋಗ್ಯ ಸೇವೆಯನ್ನು ಒದಗಿಸುವುದಕ್ಕಾಗಿ ಈ ವಾಹನವನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ವಾಹನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಈ ಹಿಂದೆ ಅರಬೈಲ್ ಶಿವರಾಂ ಹೆಬ್ಬಾರ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಾರ್ಮಿಕರ ಆರೋಗ್ಯ ಸೇವೆಗಾಗಿ ಸದರಿ ವಾಹನದ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅದು ಈಗ ಕಾರ್ಯರೂಪಕ್ಕೆ ಬಂದಿದ್ದು, ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಕಾರ್ಮಿಕರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅವರಿದ್ದ ಕಡೆಗೇ ಈ ವಾಹನವು ಸಂಚರಿಸಿ ಅವರಿಗೆ ಆರೋಗ್ಯ ಸೇವೆ ಒದಗಿಸಲಿದೆ. ಒಂದು ವರ್ಷದಲ್ಲಿ ಅವರ ಗುಣಮಟ್ಟದಲ್ಲಿ ಸುಧಾರಣೆಯಾಗಬೇಕು. ಸರ್ಕಾರದ ಈ ಯೋಜನೆಯ ಸೌಲಭ್ಯವನ್ನು ಎಲ್ಲ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಗಣ್ಯರಾದ ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೈಶೈಲ ಸೋಮನಕಟ್ಟಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ಇತರರು ಇದ್ದರು.