ವಿಜಯಸಾಕ್ಷಿ ಸುದ್ದಿ, ಗದಗ: ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೆ ಗಮನ ಹರಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.
ಅವರು ಶನಿವಾರ ಗದಗ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಮೊರಾರ್ಜಿ ವಸತಿ ಶಾಲೆ ಗ್ರಂಥಾಲಯ ಹಾಗೂ ಗಂಡು ಮಕ್ಕಳ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಮಲ್ಲಸಮುದ್ರದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಂಥಾಲಯ ಹಾಗೂ ಶಾಲಾ ಕಟ್ಟಡ ನಿರ್ಮಾಣಕ್ಕೆ 733 ಲಕ್ಷ ರೂ ಅನುದಾನ ಒದಗಿಸಲಾಗಿದೆ. ನೀಡುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ನೆರೆದ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ರವಿ ಮೂಲಿಮನಿ, ಫಾರೂಕ್ ಹುಬ್ಬಳ್ಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷ ರವಿ ಗುಂಜೀಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.