ಕಲಬುರಗಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ ಮೇಲೆ ಕೈದಿಗಳು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹಲ್ಲೆಗೆ ನಿಖರ ಕಾರಣವೇನು ಎಂಬುದನ್ನು ತಿಳಿದುಕೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿರುವ ಕೈದಿಗಳಿಗೆ ಕಾಲಕಾಲಕ್ಕೆ ಕೌನ್ಸೆಲಿಂಗ್ ನೀಡಲಾಗುತ್ತಿದೆ. ಕೆಲ ಸಂದರ್ಭಗಳಲ್ಲಿ ಕೈದಿಗಳ ಮಾನಸಿಕ ಸ್ಥಿತಿ ಸಹಜವಾಗಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಜಗಳ, ಹಲ್ಲೆಯಂತಹ ಘಟನೆಗಳು ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು.
ಕೈದಿಗಳು ಕೇಳಿದ್ದನ್ನು ನೀಡದಿದ್ದಾಗಲೂ ಕೆಲವರು ಈ ರೀತಿಯಾಗಿ ವರ್ತಿಸುವ ಸಾಧ್ಯತೆ ಇದೆ. ಹೀಗಾಗಿ ಜೈಲು ಇಲಾಖೆಯ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗಿದೆ. ಜೈಲು ಸಿಬ್ಬಂದಿ ಹಾಗೂ ಕೈದಿಗಳ ನಡುವೆ ಉಂಟಾಗುವ ಇಂತಹ ಘಟನೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಇದೇ ವೇಳೆ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ನಾನು ಜೈಲಿಗೆ ಹೋಗುತ್ತೇನೆ ಎಂದು ರಾಮುಲು ಅವರು ಹೇಳುತ್ತಿದ್ದಾರೆ. ಜೈಲಿಗೆ ಹೋಗಿ ಬಂದವರನ್ನು ನಮ್ಮನ್ನು ಜೈಲಿಗೆ ಕಳುಹಿಸುತ್ತಾರಾ?” ಎಂದು ಪ್ರಶ್ನಿಸಿದರು. ರಾಮುಲು ಅವರು ಮೊದಲು ಕನ್ನಡವನ್ನು ಸರಿಯಾಗಿ ಮಾತನಾಡುವುದನ್ನು ಕಲಿಯಲಿ ಎಂದು ವ್ಯಂಗ್ಯವಾಡಿದರು.
ಬರ ಘೋಷಣೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳ ಪ್ರಕಾರವೇ ಬರ ಘೋಷಣೆ ಮಾಡಬೇಕು. ಆದರೆ ಇದನ್ನು ಬಿಟ್ಟು ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆಯ ಹೆಸರಿನಲ್ಲಿ ಗುಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದರು.



