ಚಿತ್ರದುರ್ಗ:- ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೀಬರ್ಡ್ ಖಾಸಗಿ ಬಸ್ಸಿನಲ್ಲಿದ್ದ 8 ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬಸ್ಸಿನೊಳಗಿನಿಂದ ಸದ್ಯಕ್ಕೆ 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಿದರು. ಗಾಯಗೊಂಡವರನ್ನು ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.
ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಡಿಎನ್‌ಎ ಹಾಗೂ ಸುಕೋ ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಐಜಿಪಿ ಮಾಹಿತಿ ನೀಡಿದರು. ಇನ್ನೊಂದೆಡೆ, ಚಿತ್ರದುರ್ಗ ಎಸ್‌ಪಿ ರಂಜಿತ್ ಮಾತನಾಡಿ, ಸೀಬರ್ಡ್ ಬಸ್ಸಿನಲ್ಲಿ ಒಟ್ಟು 32 ಮಂದಿ (ಚಾಲಕ ಹಾಗೂ ನಿರ್ವಾಹಕ ಸೇರಿ) ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದರು.
ಇದುವರೆಗೆ 21 ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ 6 ಮಂದಿ ಗಾಯಗೊಂಡಿದ್ದಾರೆ. ಉಳಿದ 11 ಜನರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಪ್ರಾಥಮಿಕ ತನಿಖೆಯ ಪ್ರಕಾರ, ಲಾರಿ ಚಾಲಕನ ನಿದ್ದೆ ಮಂಪರಿನಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



