ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದು, ಟೈರ್ ಸ್ಫೋಟವಾದ ತಕ್ಷಣ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ಬಸ್ ಅನ್ನು ತಕ್ಷಣ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
ಆದರೆ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್, ಮೊಬೈಲ್‌ಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



