ಕೋಲಾರ: ಡಿವೈಡರ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಸಮೀಪ ಈ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ನಲ್ಲೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ನ ಗಾಜುಗಳನ್ನು ಒಡೆದು ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದರು.
ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕೋಲಾರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.



