ಶೇಖರಗೌಡ ರಾಮತ್ನಾಳರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗದಗ ಇವರ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ `ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಎಂಬ ಶಿರ್ಷಿಕೆಯಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009ರ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಮಾತನಾಡಿ, ಫೋಕ್ಸೋ ಕಾಯ್ದೆಯಡಿ ಮಕ್ಕಳ ಮೇಲೆ ದೌರ್ಜನ್ಯ, ಬಾಲ್ಯ ವಿವಾಹ, ಜೀತ ಪದ್ಧತಿ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆಯಲ್ಲಿ ಮಕ್ಕಳ ಹಾಜರಾತಿ ಪರಿಶೀಲಿಸಿದ ನಂತರ ದೀರ್ಘಕಾಲದವರೆಗೆ ಶಾಲೆ ಬಿಟ್ಟ ಮಕ್ಕಳ ವರದಿಯನ್ನು ಪ್ರತಿ ತಿಂಗಳು ಸಲ್ಲಿಸಬೇಕು ಎಂದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ, ಜೀತ ಪದ್ಧತಿ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಗ್ರಾಮೀಣ ಸೇರಿದಂತೆ ಜಿಲ್ಲಾ ಮಟ್ಟದಲ್ಲಿಯೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜರುಗಬೇಕು. ಶಾಲೆಗಳಲ್ಲಿ ಸಲಹಾ ಪೆಟ್ಟಿಗೆ ಮತ್ತು ಮಕ್ಕಳ ಸಹಾಯವಾಣಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರು ಮಾತನಾಡಿ, ಶೋಷಣೆಗೆ ಒಳಗಾದ ಮಕ್ಕಳ ರಕ್ಷಣೆ ಮತ್ತು ಪುರ್ನವಸತಿ ಕಲ್ಪಿಸುವುದು ಇಲಾಖೆಯ ಮೊದಲ ಆದ್ಯತೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಲಾಗುವುದು. ಬಾಲ್ಯ ವಿವಾಹ ಕಂಡುಬಂದರೆ ಸಂಬಂಧಿತ ಕುಟುಂಬದವರನ್ನು ಹೊಣೆಗಾರರನ್ನಾಗಿ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದರು.


Spread the love

LEAVE A REPLY

Please enter your comment!
Please enter your name here