ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿ

0
dc office
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಸಲಿರುವ ದ್ವೀತಿಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳನ್ನು ಏಪ್ರಿಲ್ 29ರಿಂದ ಮೇ 16ರವರೆಗೆ ಬೆಳಿಗ್ಗೆ 10.15 ಗಂಟೆಯಿಂದ ಸಂಜೆ 5.30ರವರೆಗೆ ನಡೆಸಲಿದೆ.

Advertisement

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29ರಿಂದ ಮೇ 16ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ವಿವರ

ನಗರದ ಜ.ತೊಂಟದಾರ್ಯ ಪದವಿಪೂರ್ವ ಕಾಲೇಜು, ಹೆಚ್‌ಸಿಇಎಸ್ ಪದವಿಪೂರ್ವ ಕಾಲೇಜು, ಶಿರಹಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು, ನರಗುಂದದ ಸರ್ಕಾರಿ ಪದವಿಪೂರ್ವ ಕಾಲೇಜು, ಮುಂಡರಗಿಯ ಜೆ.ಎ. ಪದವಿಪೂರ್ವ ಕಾಲೇಜು, ರೋಣದ ವೀರರಾಣಿ ಚನ್ನಮ್ಮ ಪದವಿಪೂರ್ವ ಕಾಲೇಜು, ಲಕ್ಷ್ಮೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜು, ಗಜೇಂದ್ರಗಡ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.


Spread the love

LEAVE A REPLY

Please enter your comment!
Please enter your name here