ವಿಜಯಸಾಕ್ಷಿ ಸುದ್ದಿ, ಗದಗ: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯಿಂದ ಫೆ.24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಹೇಳಿದರು.
ಅವರು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಪಾಲು ನೀಡಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಘೋಷಣೆ ಮಾಡಬೇಕು. ರಾಜ್ಯದ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ 5 ಸಾವಿರಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಪಾಲ್ಗೊಂಡು ವಸತಿ ಸಚಿವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವರು. ಸಂವಿಧಾನದ ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ಸರ್ಕಾರ ರಾಜ್ಯದ ಸ್ಲಂ ಜನರ ಪರವಾದ ಯೊಜನೆಗಳನ್ನು ಜಾರಿಗೆ ತಂದು ಅನುದಾನ ನೀಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಮೌಲಾಸಾಬ ಗಚ್ಚಿ, ಖಾಜಾಸಾಬ ಇಸ್ಮಾಯಿಲನವರ, ಅಕಬರಸಾಬ ಡಂಬಳ, ಮಂಜುನಾಥ ಶ್ರೀಗಿರಿ ಮುಂತಾದವರು ಉಪಸ್ಥಿತರಿದ್ದರು.