ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸೌಲಭ್ಯ ನೀಡಬೇಕು ಮತ್ತು ಹಾಸ್ಟೆಲ್ ಆಯ್ಕೆ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಕಾಟನ್ ಸೇಲ್ ಸೊಸೈಟಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಹೊಂದಿರುವ ಕಾಟನ್ ಸೇಲ್ ಸೊಸೈಟಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಪ್ರತಿಭಟನಾಕಾರರು ಆಕ್ರೋಶಗೊಂಡರು. ವಶಕ್ಕೆ ಪಡೆದ ಮುಖಂಡರನ್ನು ಬಿಡುಗಡೆ ಮಾಡಿದ ನಂತರವೇ ಮನವಿ ಸಲ್ಲಿಸಲಾಗುವುದು ಎಂದು ಪಟ್ಟು ಹಿಡಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಚಿವ ಎಚ್.ಕೆ. ಪಾಟೀಲ, ವಿದ್ಯಾರ್ಥಿ ಮುಖಂಡರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳು ತಮ್ಮ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಿದರು.
ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ವಿದ್ಯಾರ್ಥಿ ವೇತನವನ್ನು ತಕ್ಷಣ ಬಿಡುಗಡೆಗೊಳಿಸಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಜಾರಿ ಮಾಡಬೇಕು. ಬಸ್ ಪಾಸ್ ವಿತರಣೆ ಸರಿಯಾಗಿ ಮಾಡಬೇಕು. ಹಾಸ್ಟೆಲ್‌ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಎನ್ನುವ ಮನವಿಯನ್ನು ಸಚಿವರಿಗೆ ಸಲ್ಲಿಸಿದರು.