ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಖಂಡಿಸಿ ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ಹುಯಿಲಗೋಳ ನಾರಾಯಣರಾವ್ ವೃತ್ತದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕನಗೌಡ ಗೋವಿಂದಗೌಡ್ರ, ರಾಜ್ಯ ಕಾಂಗ್ರೆಸ್ ಸರಕಾರ ಒಂದೇ ವರ್ಷದಲ್ಲಿ ಆಡಳಿತ ವೈಫಲ್ಯ ಕಂಡಿದೆ ಮತ್ತು ಭ್ರಷ್ಟಾಚಾರ ನಡೆಸಿದೆ ಎನ್ನುವುದಕ್ಕೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ಬಂಧಿಸಿರುವುದೇ ಸಾಕ್ಷಿ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ 14 ಸಾವಿರ ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್ ಸರಕಾರಕ್ಕೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಕಾರ್ಯಕ್ರಮಗಳಿಗೆ ಪೆಟ್ರೋಲ್ ಮತ್ತು ಡಿಸೇಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದರು. ಗ್ಯಾರಂಟಿ ಹೆಸರಿನಲ್ಲಿ ರೈತರಿಗೆ ನೀಡಲಾಗುತ್ತಿದ್ದ ಸಹಾಯಧನ, ವಿದ್ಯಾರ್ಥಿ ವೇತನವನ್ನು ತಡೆಹಿಡಿದರು.
ಯಾವುದೇ ಜನಪರ ಕಾರ್ಯಕ್ರಮಗಳನ್ನು ನೀಡದೆ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದ್ದೇ ಕಾಂಗ್ರೆಸ್ ಸರಕಾರದ ಒಂದು ವರ್ಷದ ಸಾಧನೆಯಾಗಿದೆ ಎಂದು ಆಪಾದಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪದಾಧಿಕಾರಿಗಳಾದ ಬಸವರಾಜ ಅಪ್ಪಣ್ಣವರ, ಪ್ರಫುಲ್ ಪುಣೇಕರ, ಮಲ್ಲಿಕಾರ್ಜುನ ಪರ್ತಗೌಡ್ರ, ಮಂಜುಳಾ ಮೇಟಿ, ವೀರಪ್ಪ ಜಿರ್ಲಿ, ಡಾ. ಶರಣಪ್ಪ ಹೂಗಾರ, ಕೆ.ಎಚ್. ಕೊಳ್ಳಿಮಠ, ಮರಿಯಪ್ಪ ಬಳ್ಳಾರಿ, ಹಾಜಿಅಲಿ ಕೊಪ್ಪಳ, ತಿಪ್ಪಣ್ಣ ಹುಡೇದ, ಅಮರೇಶ ಅಂಗಡಿ, ಕುಮಾರ ಜಿಗಳೂರ, ಸುಪ್ರಿತ್ ಬಾಗಲಕೋಟ, ಸುನೀಲ ಹುಬ್ಬಳ್ಳಿ, ಯಲ್ಲಪ್ಪ ಹೂಗಾರ, ಯಲ್ಲಪ್ಪ ಹೊಂಬಳ ಇತರರು ಉಪಸ್ಥಿತರಿದ್ದರು.
ಕಾರ್ಯಾಂಗದ ಪ್ರಮುಖ ಭಾಗವಾಗಿರುವ ಸರಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾದರೂ ಸರಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗಿಲ್ಲ. ಇಂಥ ಭ್ರಷ್ಟ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು ಎಂದು ಗೋವಿಂದಗೌಡ್ರ ಒತ್ತಾಯಿಸಿದರು.