ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿ

0
Protest by Karnataka Defense Forum
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಸೂಕ್ತ ಕಾಯ್ದೆ ರೂಪಿಸಿ, ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟರ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಎಚ್.ಅಬ್ಬಿಗೇರಿ ಮಾತನಾಡಿ, ವಲಸೆ ಕಾರಣದಿಂದಾಗಿ ಕನ್ನಡ ನಾಡಿನ ಭೌಗೋಳಿಕ, ಸಾಮಾಜಿಕ, ರಾಜಕೀಯ ಚಹರೆಯೇ ಬದಲಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರು ದೊಡ್ಡ ಪ್ರಮಾಣದ ವಲಸೆಯಿಂದ ಬಸವಳಿದು ಹೋಗುತ್ತಿದೆ.

ಮಹಾವಲಸೆಯ ಬಹುಮುಖ್ಯ ದುಷ್ಪರಿಣಾಮ ಕನ್ನಡದ ಯುವಸಮುದಾಯದ ಮೇಲೆ ಆಗುತ್ತಿದ್ದು, ಕನ್ನಡಿಗರಿಗೆ ಕನ್ನಡದ ನೆಲದಲ್ಲೇ ಉದ್ಯೋಗವಿಲ್ಲದಂತಾಗಿದೆ ಎಂದು ಹೇಳಿದರು.

ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ತಮ್ಮ ರಾಜ್ಯದ ಯುವಜನರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ವರ್ಷದಿಂದ ವರ್ಷಕ್ಕೆ ಕನ್ನಡಿಗರ ಪ್ರಮಾಣ ಕುಸಿಯುತ್ತಲೇ ಬರುತ್ತಿದೆ.

ಹೀಗೆಯೇ ಮುಂದುವರಿದರೆ ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾರಣ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಆದಷ್ಟು ಶೀಘ್ರವೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು ಎಂದು ಆಗ್ರಹಿಸುತ್ತಿದೆ ಎಂದು ಹೇಳಿದರು.

ಕರವೇ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಜಿಲ್ಲಾ ವಕ್ತಾರ ವಿರೂಪಾಕ್ಷಪ್ಪ ಹಿತ್ತಲಮನಿ, ಮಹಿಳಾ ಘಟಕದ ಅಧ್ಯಕ್ಷೆ ಆಶಾ ಜೂಲಗುಡ್ಡ, ರೋಣ ತಾಲೂಕು ಘಟಕದ ಅಧ್ಯಕ್ಷ ಶರಣಪ್ಪ ಕರಮುಡಿ, ನರಗುಂದ ತಾಲೂಕು ಘಟಕದ ಅಧ್ಯಕ್ಷ ನಬಿಸಾಬ್ ಖಿಲ್ಲೇದಾರ ಸೇರಿದಂತೆ ವೇದಿಕೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ 100ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. 15 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆ ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು ಎಂಬ ಹಕ್ಕೊತ್ತಾಯ ಮಂಡಿಸಿದ ಪ್ರತಿಭಟನಕಾರರು ವಿವಿಧ ಬೇಡಿಕೆಗಳ ಮನವಿಪತ್ರವನ್ನು ಸರ್ಕಾರಕ್ಕೆ ಸಲ್ಲಿಸಿದರು.


Spread the love

LEAVE A REPLY

Please enter your comment!
Please enter your name here