ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣನವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬುವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸ್ಲಂ ಜನಾಂದೋಲನ–ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ದೊಡ್ಡಯಾಚೆನಹಳ್ಳಿಯ ವೇದಮೂರ್ತಿ ಅವರು ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆಯಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಪೌರಕಾರ್ಮಿಕರು ಭೇಟಿ ಮಾಡಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಮನವಿ ಮಾಡಿದಾಗ ಸಚಿವರು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆಯ ಸಂದರ್ಭದಲ್ಲಿ ಕನಿಷ್ಠ ವೇತನದಲ್ಲಿ ಕುಟುಂಬ ನಿರ್ವಹಿಸುವುದು ಕಷ್ಟವಾಗಿದ್ದು, ಪೌರಕಾರ್ಮಿಕರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಚಿವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕ್ರಮ ಜರುಗಿಸಿ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದರು.
ವಕೀಲ ಎಂ.ಬಿ. ನದಾಫ, ಪರವೀನಬಾನು ಹವಾಲ್ದಾರ, ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಪುಷ್ಪಾ ಬಿಜಾಪುರ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಸಾಕ್ರುಬಾಯಿ ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ಅಫ್ರೋಜಾ ಗುಳಗುಂದಿ, ಗೌಸಸಾಬ ಅಕ್ಕಿ, ರವಿ ಗೋಸಾವಿ, ಮಾಲಾ ಗೋಸಾವಿ ಸೇರಿದಂತೆ ವಿವಿಧ ಸ್ಲಂ ಪ್ರದೇಶಗಳ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ವಿರುದ್ಧ ಕಠಿಣ ಕ್ರಮ ಜರುಗಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಪೌರಕಾರ್ಮಿಕರನ್ನು ಅವಮಾನಿಸಿದ ಸಚಿವ ಕೃಷ್ಣ ಬೈರೇಗೌಡ ಅವರೂ ಕ್ಷಮೆ ಕೇಳಬೇಕು.
— ಇಮ್ತಿಯಾಜ್ ಆರ್. ಮಾನ್ವಿ, ಸ್ಲಂ ಸಮಿತಿ ಅಧ್ಯಕ್ಷ



