ವೇತನಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ ಕಳೆದ 5 ತಿಂಗಳಿAದ ವೇತನ ಬಾಕಿ ಉಳಿದಿದ್ದು, ಕೂಡಲೇ ಬಾಕಿ ಸಂಬಳವನ್ನು ನೀಡಬೇಕೆಂದು ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ, ಸುರಿವ ಮಳೆಯ ನಡುವೆಯೇ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement

ಜಿಲ್ಲಾ ನರೇಗಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಬಾಳಿಕಾಯಿ ಮಾತನಾಡಿ, ಗ್ರಾಮೀಣಾಭಿವೃದ್ಧಿಯಲ್ಲಿ ಉದ್ಯೋಗ ಖಾತರಿ ಯೋಜನೆ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಹಂತದಲ್ಲಿ ಎಡಿಪಿಸಿ, ಡಿಎಂಐಎಸ್, ಡಿಐಇಸಿ, ಡಿಎಎಂ ತಾಲೂಕು ಹಂತದಲ್ಲಿ ಟಿಐಇಸಿ, ಟಿಸಿ, ಟಿಎಂಐಎಸ್, ಟಿಎಇ ವಿಭಾಗದಲ್ಲಿ ಹಾಗೂ ಗ್ರಾಮ ಕಾಯಕ ಮಿತ್ರರು ಸೇರಿ ವಿವಿಧ ಹುದ್ದೆಗಳಲ್ಲಿ 130ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ನರೇಗಾ ಯೋಜನೆಯ ಸಿಬ್ಬಂದಿಗೆ ಕಳೆದ 5 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ತಿಳಿಸಿದರು.

ರಾಜ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಕುಮಾರ ಪೂಜಾರ ಮಾತನಾಡಿ, ಸರ್ಕಾರ ಕೂಡಲೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ನರೇಗಾ ಅನುಷ್ಠಾನಕ್ಕೆ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಎಲ್ಲರೂ ಅತ್ಯವಶ್ಯವಾಗಿದ್ದಾರೆ. ಆದ್ದರಿಂದ ಸರ್ಕಾರ ವೇತನ ಪಾವತಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಸಂಘದ ಪರವಾಗಿ ಆಗ್ರಹಿಸಿದರು.

ರಾಜ್ಯ ಗ್ರಾ.ಪಂ ಸದಸ್ಯರ ಸಂಘದ ಜಿಲ್ಲಾಧ್ಯಕ್ಷ ಸೋಮರಡ್ಡಿ ನಡವೂರ, ಜಿಲ್ಲಾ ಸಂಘದ ನಿಕಟಪೂರ್ವ ಅಧ್ಯಕ್ಷ ಲಿಂಗರಾಜ ಮುದಿಗೌಡ್ರ, ಸಂಘದ ಜಿಲ್ಲಾ ಉಪಾಧ್ಯಕ್ಷ ಸಿದ್ದು ಗುಡಿಮನಿ, ಜಿಲ್ಲಾ ಸಂಘದ ಕಾರ್ಯದರ್ಶಿ ಅರುಣ ಸಿಂಗ್ರಿ ಸಾಮದರ್ಭಿಕವಾಗಿ ಮಾತನಾಡಿದರು.

ಸಂಘದ ಸದಸ್ಯರಾದ ಶಾಂತಾ ತಿಮ್ಮರಡ್ಡಿ, ದಿನೇಶ ಮಲ್ಲನಗೌಡ್ರ, ಗಂಗಾಧರ ಬೇಗೂರ, ರಾಜ್ಯ ಪ್ರತಿನಿಧಿ ಕಿರಣಕುಮಾರ ಎಸ್.ಎಚ್, ಮಲ್ಲಿಕಾರ್ಜುನ ಸರ್ವಿ, ವೀರಭದ್ರಪ್ಪ ಸಜ್ಜನ, ಮಹೇಶ ಚಿತ್ತವಾಡಗಿ, ಹನುಮಂತ ಡಂಬಳ, ಪ್ರವೀಣ ಸೂಡಿ, ವೀರೇಶ ಬಸನಗೌಡ್ರ, ವಿಜಯಲಕ್ಷ್ಮೀ ಅಂಗಡಿ, ರೇಷ್ಮಾ ಕೇಳೂರ, ಮಂಜುನಾಥ ಹಳ್ಳದ, ಗ್ರಾಮ ಕಾಯಕ ಮಿತ್ರರು ಇದ್ದರು.

ಜಿ.ಪಂಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಸ್ಥಳಕ್ಕೆ ಆಗಮಿಸಿ, ಮನವಿ ಸ್ವೀಕರಿಸಿ ಮಾತನಾಡಿ, ರಾಜ್ಯಾದ್ಯಂತ ಸಮಸ್ಯೆ ಉದ್ಭವವಾಗಿದೆ. ಸರ್ಕಾರದ ಮಟ್ಟದಲ್ಲಿ ಇದನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here