ವಿಜಯಸಾಕ್ಷಿ ಸುದ್ದಿ, ಗದಗ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಅವರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿ / ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ಗಳ 2ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ವೇತನದೊಂದಿಗೆ ಇ.ಎಸ್.ಐ/ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು. ನಿಯಮಿತವಾಗಿ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಗಮ್‌ಬೂಟ್, ಮಾಸ್ಕ್, ಜಾಕೆಟ್, ಹ್ಯಾಂಡ್ ಗ್ಲೌಸ್, ಹೆಲ್ಮೆಟ್, ಏಪ್ರಾನ್, ವಿವಿಧ ಸುರಕ್ಷಾ ಪರಿಕರಗಳನ್ನು ವಿತರಿಸಲಾಗಿದ್ದು, ಅವುಗಳನ್ನು ಪೌರಕಾರ್ಮಿಕರು ಧರಿಸಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ವಿವರಣೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ್ರ ಕೊಟ್ಟೂರ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಸಂಯೋಜಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್‌ಹೋಲ್ / ಮಲದ ಗುಂಡಿಗಳನ್ನು ಸ್ವಚ್ಛಗೊಳಿಸಲು ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳನ್ನು ಸಮರ್ಪಕವಾಗಿ ಬಳಸುತ್ತಿರುವ ಹಾಗೂ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ, ವೈಯಕ್ತಿಕ ಶೌಚಾಲಯ ನಿರ್ಮಾಣ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.