ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ವಿದ್ಯಾರ್ಥಿನಿ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆ ಪರೀಕ್ಷಾ ಭಯದಿಂದ ಹಿರಿಯ ವಿದ್ಯಾರ್ಥಿನಿ ತನ್ನ ಕಿರಿಯ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ತನಿಷ್ಕಾ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಪರೀಕ್ಷೆ ಬರೆಯಲು ಇಚ್ಛಿಸದೆ ಮನೆ ತೊರೆದಿರಬಹುದೆಂದು ಕುಟುಂಬಸ್ಥರು ಹಾಗೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಾಣೆಯಾಗಿರುವ ಇಬ್ಬರೂ ತಮ್ಮ ಮೊಬೈಲ್ ಫೋನ್‌ಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದು, ಎಟಿಎಂ ಕಾರ್ಡ್ ಸೇರಿದಂತೆ ಯಾವುದೇ ಹಣಕಾಸು ಸಾಮಗ್ರಿಗಳನ್ನು ಕೊಂಡೊಯ್ದಿಲ್ಲ ಎಂದು ತಿಳಿದುಬಂದಿದೆ. ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗ್ ಮಾತ್ರ ತೆಗೆದುಕೊಂಡು ನಾಪತ್ತೆಯಾಗಿರುವ ಇವರು, ಉಚಿತ ಬಸ್ ಪ್ರಯಾಣ ಸೌಲಭ್ಯ ಬಳಸಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆ ಸ್ನೇಹಿತರಿಗೆ ಕರೆ ಮಾಡಿ ಮಲೆ ಮಹದೇಶ್ವರ ಬೆಟ್ಟದಲ್ಲಿದ್ದೇವೆ ಎಂದು ತಿಳಿಸಿದ್ದರೆಂದು ಹೇಳಲಾಗಿದೆ. ಒಂದು ವಾರದಲ್ಲಿ ಮತ್ತೆ ಸಂಪರ್ಕಿಸುವುದಾಗಿ ತಿಳಿಸಿದ್ದರೂ, ನಂತರ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಈ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಒಂದು ವಾರದ ಗಡುವು ನೀಡಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳಿನಿಂದ ಮಕ್ಕಳಿಗಾಗಿ ಕಣ್ಣೀರಿಡುತ್ತಿರುವ ಕುಟುಂಬಸ್ಥರು, ಸುರಕ್ಷಿತವಾಗಿ ಮನೆಗೆ ಮರಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



