ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮವಹಿಸಿ : ಶಂಕರ ಎಂ.ರಾಗಿ

0
Public Grievance Meeting
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಮಾಹಿತಿ ಹಕ್ಕು ಹಾಗೂ ಸಕಾಲ ಯೋಜನೆಗಳ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸಲ್ಲಿಸಬಹುದು. ಸಾರ್ವಜನಿಕರ ಸಲ್ಲಿಸಿದ ಅರ್ಜಿಗಳನ್ನು ಶೀಘ್ರದಲ್ಲೇ ಅಧಿಕಾರಿಗಳು ವಿಲೇವಾರಿ ಮಾಡಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶಂಕರ ಎಂ.ರಾಗಿ ಹೇಳಿದರು.

Advertisement

ಬುಧವಾರ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನಲ್ಲಿ ಯಾವುದೇ ತರಹದ ಕಲಬೆರಕೆಯಾಗಬಾರದು. ನೀರಿನ ಟ್ಯಾಂಕರ್‌ಗಳನ್ನು ಶುಚಿಗೊಳಿಸಬೇಕು. ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ತ್ವರಿತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕ ವೆಂಕನಗೌಡ ಪಾಟೀಲ ಮಾತನಾಡಿ, ಸಸ್ಯ ಶ್ಯಾಮಲಾ ಯೋಜನೆ ಮೂಲಕ ಸಸಿಗಳನ್ನು ನೆಡುವುದಷ್ಟೇ ಅಲ್ಲ ಅವುಗಳ ಸಂರಕ್ಷಣೆ ಮಾಡಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಅರ್ಜಿಗಳನ್ನು ನೀಡಲು ಬಂದರೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಆ ಅರ್ಜಿಗಳಿಗೆ ಕಡ್ಡಾಯವಾಗಿ ಸ್ವೀಕೃತಿಯನ್ನು ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು.

ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಿ, ಅವುಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಳೆಗಾಲ ಪ್ರಾರಂಭವಾಗಿದ್ದು, ಸರಕಾರಿ ಶಾಲೆಗಳ ಮೇಲ್ಪಾವಣಿಯನ್ನು ದುರಸ್ಥಿಗೊಳಿಸಬೇಕಾಗಿದೆ. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿ, ನೀಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಿಂದ ಒಟ್ಟಾರೆ 06 ಅರ್ಜಿಗಳು ಸ್ವೀಕೃತಗೊಂಡಿವೆ. ಅವುಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಪ್ರಭುಲಿಂಗ ಹಿರೇಮಠ, ಕರುಣೇಶಗೌಡ ಜಿ., ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ್ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ಹುಬ್ಬಳ್ಳಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here