ನವದೆಹಲಿ: ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರತಿಭಟನಾ ಸ್ಥಳವಾಗಿರುವ ಜಂತರ್ ಮಂತರ್ ಅನ್ನು ಪ್ರತಿಭಟನೆಗಳಿಗೆ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸುವ ಬಗ್ಗೆ ಏಕೆ ಪರಿಶೀಲಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಪ್ರತಿಭಟನೆಗಳ ಹೆಸರಿನಲ್ಲಿ ನಗರದ ಜನಜೀವನವನ್ನು ವಿನಾಕಾರಣ ಅಸ್ತವ್ಯಸ್ತಗೊಳಿಸುವುದು ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು, “ಇಂತಹ ಪ್ರತಿಭಟನೆಗಳು ನಗರದ ಒಳಭಾಗದಲ್ಲಿ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ಆದರೆ ಇದು ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಪ್ರತಿಭಟನೆಗಳಿಂದ ಇಡೀ ನಗರವನ್ನು ಒತ್ತೆಯಾಳಾಗಿ ಇಡುವುದು ಎಷ್ಟು ಸಮಂಜಸ?” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರನ್ನು ಪ್ರಶ್ನಿಸಿದರು.
ಅಂಬುಲೆನ್ಸ್ ಸಂಚಾರ ಸೇರಿದಂತೆ ನಗರದ ದೈನಂದಿನ ಚಟುವಟಿಕೆಗಳಿಗೆ ಪ್ರತಿಭಟನೆಗಳಿಂದ ಅಡ್ಡಿಯಾಗುತ್ತಿದೆ ಎಂದು ತಿಳಿಸಿದ ನ್ಯಾಯಮೂರ್ತಿಗಳು, ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಮುಂದುವರಿಸುವ ಬಗ್ಗೆ ಮರುಪರಿಶೀಲಿಸುವಂತೆ ಸೂಚಿಸಿದರು.
ಆಲ್ ಇಂಡಿಯಾ ದಲಿತ ಕ್ರಿಶ್ಚಿಯನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಘೋಷ್, ತಮ್ಮ ಸಂಘಟನೆ ಕೇವಲ 75 ಜನರೊಂದಿಗೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಜುಲೈನಲ್ಲಿ ಅರ್ಜಿ ಸಲ್ಲಿಸಿದ್ದರೂ ದೆಹಲಿ ಪೊಲೀಸರು ಈವರೆಗೆ ಅನುಮತಿ ನೀಡಿಲ್ಲ ಅಥವಾ ಅರ್ಜಿಯನ್ನು ತಿರಸ್ಕರಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಶಾಹೀನ್ ಬಾಗ್ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ ಅವರು, ಶಾಂತಿಯುತ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಹಕ್ಕು ಎಂದು ವಾದಿಸಿದರು.
ಎಎಸ್ಜಿ ಚೇತನ್ ಶರ್ಮಾ ಪ್ರತಿಕ್ರಿಯಿಸಿ, ಜಂತರ್ ಮಂತರ್ ಪ್ರದೇಶದಲ್ಲಿ ಸಿಆರ್ಪಿಸಿ ಸೆಕ್ಷನ್ 144 ಜಾರಿಯಲ್ಲಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
75 ಜನರು ಎಂದು ಅನುಮತಿ ಪಡೆದು ಸಾವಿರಾರು ಜನರು ಸೇರಿದ್ದರೆ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗುತ್ತದೆ ಎಂದು ಅವರು ಹೇಳಿದರು. ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ವಿಚಾರವನ್ನು ಈಗಾಗಲೇ ಸುಪ್ರೀಂ ಕೋರ್ಟ್ ಪರಿಶೀಲಿಸುತ್ತಿದೆ ಎಂದು ತಿಳಿಸಿದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ದೆಹಲಿ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಆಗಸ್ಟ್ 8ರೊಳಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.



