ಬೆಂಗಳೂರು: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್ಸ್ಟಾಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡುವುದಾಗಿ ಪೋಸ್ಟ್ ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ.
‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ” ಎಂದು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲೆ ಅನುಮಾನ ಹುಟ್ಟಿಸಿದೆ.
ಆದರೆ, ಯಾವ ವಿಷಯದ ಪ್ರಶ್ನೆ ಪತ್ರಿಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪರೀಕ್ಷಾ ಸಮಯದಲ್ಲಿ ಹಳೆಯ ಅಥವಾ ನಕಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಹಣ ಮಾಡುವ ಉದ್ದೇಶದಿಂದ ಇಂತಹ ಮೋಸಗಳು ನಡೆಯುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬಾರದು ಮತ್ತು ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಜನವರಿ 6, 2026ರಂದು ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ವಾಟ್ಸಾಪ್ ಮೂಲಕ ಹರಿದಾಡಿತ್ತು. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆ ತುಮಕೂರು ಜಿಲ್ಲೆಯಲ್ಲೂ ಪತ್ತೆಯಾಗಿತ್ತು.
ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



