ಬೆಂಗಳೂರು: ಕಾಂಗ್ರೆಸ್‍ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರವು ಎಸ್‍ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಏರಿಸಿತ್ತು. ಎಸ್‍ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿತ್ತು. ಎಸ್‍ಟಿ ಸಮುದಾಯಕ್ಕೆ ನ್ಯಾಯಯುತ ಬೇಡಿಕೆಯನ್ನು ನಾವು ಈಡೇರಿಸಿದ್ದೆವು ಎಂದು ಗಮನ ಸೆಳೆದರು.
ಮಾಧುಸ್ವಾಮಿ ವರದಿ, ಸದಾಶಿವ ಆಯೋಗವನ್ನು ಗಮನದಲ್ಲಿ ಇಟ್ಟುಕೊಂಡು ನಾವು ಮೀಸಲಾತಿಯನ್ನು ಹೆಚ್ಚಿಸಿದ್ದೆವು. ಇದು ಸುಮಾರು 30 ವರ್ಷಗಳ ಹೋರಾಟದ ಪ್ರತಿಫಲ ಎಂದು ವಿವರಿಸಿದರು. ಕಾಂಗ್ರೆಸ್ ಸರಕಾರದ ಕ್ರಮದಿಂದ ಎಸ್‍ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ. ಮೀಸಲಾತಿ ಕಡಿಮೆ ಮಾಡಲು ಮತ್ತು ಘನಂದಾರಿ ಕೆಲಸಕ್ಕೆ ಸಿದ್ದರಾಮಯ್ಯನವರ ಸರಕಾರವೇ ಬೇಕಿತ್ತೇ? ಇದೇನಾ ನಿಮ್ಮ ದಲಿತಪರ ನೀತಿ ಎಂದು ಪ್ರಶ್ನಿಸಿದರು.
ಹಿಂದೆ 10 ವರ್ಷ ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೀಸಲಾತಿ ಪ್ರಮಾಣ ಹೆಚ್ಚಿಸಿಲ್ಲವೇಕೆ ಎಂದು ಕೇಳಿದರು. ಎಸ್‍ಟಿ ಸಮುದಾಯ ನ್ಯಾಯ ಕೇಳುತ್ತಿದೆ. ಅದಕ್ಕೆ ನಿಮ್ಮ ಉತ್ತರವೇನು ಎಂದು ಪ್ರಶ್ನೆಯನ್ನು ಮುಂದಿಟ್ಟರು. 7ರಿಂದ ಶೇ 3ಕ್ಕೆ ಇಳಿಸಲಾಗಿದೆ. ಇನ್ನೆಷ್ಟು ವರ್ಷ ಹೋರಾಟ ಮಾಡಬೇಕಾದೀತು ಎಂದರು.
ಮೀಸಲಾತಿ ಪ್ರಮಾಣ ಕಡಿತ ಮಾಡಿ ಎಸ್‍ಟಿಗಳಿಗೆ ಅವಮಾನ ಮಾಡಿದ್ದಾರೆ. ದಲಿತರ ಬೆನ್ನಿಗೆ ಇವರು ಚೂರಿ ಹಾಕಿದ್ದಾರೆ. ಇದು ಇವರ ದ್ವಂದ್ವ ನೀತಿ ಎಂದು ಆಕ್ಷೇಪಿಸಿದರು. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಇದನ್ನು ಸರಿಪಡಿಸದೇ ಇದ್ದರೆ ಹೋರಾಟವು ದೊಡ್ಡ ಜ್ವಾಲೆಯಾಗಿ ರಾಜ್ಯ ಸರಕಾರವನ್ನು ಕಿತ್ತೆಸೆಯುವಂಥ ತೀರ್ಮಾನವನ್ನು ಆ ಸಮುದಾಯದವರು ಮಾಡಲಿದ್ದಾರೆ. ನಾವು ಕೂಡ ಅವರ ಹೋರಾಟಕ್ಕೆ ಬೆಂಬಲ ಕೊಡುತ್ತೇವೆ ಎಂದು ತಿಳಿಸಿದರು.



