ಕೊಪ್ಪಳ: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನದ ಬೆಳವಣಿಗೆಗಳು ಮುಂದುವರಿದಿವೆ.
ಕೊಪ್ಪಳ ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರಿಂದ ರಾಜೀನಾಮೆ ಪರ್ವ ಆರಂಭವಾಗಿದೆ.
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಪುರ ಅವರಿಗೆ ಸಲ್ಲಿಸಿದ್ದಾರೆ.
ರಾಘವೇಂದ್ರ ಹಿಟ್ನಾಳ್ ಅವರ ಆಪ್ತೆಯಾಗಿರುವ ಜ್ಯೋತಿ ಗೊಂಡಬಾಳ್, ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 75 ವರ್ಷಗಳಿಂದ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ನೋವು ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಕೊಪ್ಪಳ ಕಾಂಗ್ರೆಸ್ನಲ್ಲಿ ಉಂಟಾಗಿರುವ ಈ ಬೆಳವಣಿಗೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



