ಬೆಂಗಳೂರು:- 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ಅಕ್ರಮವನ್ನು ಖಂಡಿಸಿ ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ.
ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಉದ್ಯಾನ, ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ಚಾಲುಕ್ಯ ವೃತ್ತ, ಅರಮನೆ ರಸ್ತೆ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್ ವೃತ್ತ ಹಾಗೂ ಮೆಜೆಸ್ಟಿಕ್ ಆಸುಪಾಸಿನಲ್ಲಿ ವಾಹನ ಚಾಲಕರು ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ಶುಕ್ರವಾರ ದಿನವಿಡೀ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.
ಇನ್ನೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿರುವ ಹಿನ್ನೆಲೆ, ಪಾರ್ಕ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಮಾರು 6,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಮತಕ್ಷೇತ್ರದ ಭಾಗವಾಗಿರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆಯೆಂದು ರಾಹುಲ್ ಗಾಂಧಿ ಅರೋಪಿಸಿದ್ದಾರೆ.