ರಾಯಚೂರು: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ.
ಪ್ರಸ್ತುತ, ಸ್ವಾಮೀಜಿಯನ್ನು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿರುವ ಶ್ರೀಗಳು, ನಿನ್ನೆ ರಾತ್ರಿ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು.
ಈ ಸಮಯದಲ್ಲಿ ಅವರು ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸಿದರು. ತಕ್ಷಣವೇ ಅವರನ್ನು ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗೆ ಅಪೋಲೋ ಆಸ್ಪತ್ರೆ, ಹೈದರಾಬಾದ್ ಗೆ ಸ್ಥಳಾಂತರಿಸಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಶ್ರೀಗಳು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠ ಮತ್ತು ಆಸ್ಪತ್ರೆ ಮೂಲಗಳು ತಿಳಿಸಿದ್ದಾರೆ.
ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಉಂಟಾಗಿದೆ. ಅಭಿಮಾನಿಗಳು ಶ್ರೀಗಳು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.



