ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 10ರವರೆಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಂಗಳವಾರದಿಂದ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಲೆನಾಡಿನ ಕೆಲವು ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದ್ದು, ಅಕ್ಟೋಬರ್ 8ರಿಂದ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ.
9 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲೂ ಮಳೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಇದೇ ರೀತಿಯ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

