ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಮಾರ್ಚ್ 30ರಿಂದ ಏಪ್ರಿಲ್ 3ರವರೆಗೆ ಬೆಂಗಳೂರಿನಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ನಗರದಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ ಸುಮಾರು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಇದೇ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.
ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ಇದೇ ವೇಳೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಗುಡುಗು-ಮಿಂಚಿನ ವೇಳೆ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿಲೋಮೀಟರ್ವರೆಗೆ ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.



