ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರೂ, ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 11ರವರೆಗೆ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ತೀವ್ರ ಬಿಸಿಲು ಕೂಡ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ವರುಣನ ಅಬ್ಬರ ಕಂಡುಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇನ್ನೊಂದೆಡೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ. ನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 10ರಿಂದ 16 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



