ಬೆಂಗಳೂರು:- ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಮಳೆ ಸ್ವಲ್ಪ ಚುರುಕಾಗಿದ್ದು, ರಾಜ್ಯದಲ್ಲಿ ಒಂದು ವಾರದ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ಸೋಮವಾರ ಹಗುರ ಮಳೆಯಾಗಲಿದೆ. ಆದರೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಹಾಗೇ, ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


