ರಾಯಚೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹಕಾರಿ ಅಪೆಕ್ಸ್ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಸಣ್ಣ ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.
ನಗರದ ಕೆಇಬಿ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಕೆ.ಎನ್. ರಾಜಣ್ಣ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರು ಎಂದು ಹೇಳಿದರು.
ಅವರು ಸಚಿವರಾಗಿದ್ದಷ್ಟೇ ಅಲ್ಲದೆ, ಅಪೆಕ್ಸ್ ಬ್ಯಾಂಕ್‌ನಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದೆ. ಬ್ಯಾಂಕ್‌ನಲ್ಲಿ ಅವರದೇ ತಂಡ ಇರುವ ಕಾರಣದಿಂದ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವ ಉದ್ದೇಶದಿಂದ ಈ ಇಬ್ಬರ ಭೇಟಿ ನಡೆದಿದೆ ಎಂದು ಸ್ಪಷ್ಟಪಡಿಸಿದರು.
ಅಧಿಕಾರ ಹಂಚಿಕೆ ವಿಚಾರವಾಗಿ ವಿರೋಧ ಪಕ್ಷಗಳು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಬೋಸರಾಜು, ಈ ಕುರಿತು ಮುಖ್ಯಮಂತ್ರಿ ಸದನದಲ್ಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಕಾಂಗ್ರೆಸ್ ಬದ್ಧವಾಗಿದ್ದು, ಎಲ್ಲರೂ ಅದರಂತೆ ನಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.



