ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಶಿಡ್ಲಘಟ್ಟದಲ್ಲಿ ನಡೆದ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೆಪಿಸಿಸಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.
ಈ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ರಾಜೀವ್ ಗೌಡಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 7 ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಪ್ರಕಾರ, ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರವಾಗಿ ಪೌರಾಯುಕ್ತರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸುವಾಗ, ರಾಜೀವ್ ಗೌಡ ಅವರು ಅಸಭ್ಯ ಪದಗಳನ್ನು ಬಳಸಿ ವ್ಯಕ್ತಿಗತ ನಿಂದನೆ ಮಾಡಿದ್ದಾರೆ. ಈ ಸಂಭಾಷಣೆ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದ್ದು, ಪಕ್ಷದ ಗೌರವಕ್ಕೆ ಧಕ್ಕೆ ಉಂಟುಮಾಡಿದೆ ಎಂದು ಕೆಪಿಸಿಸಿ ಸ್ಪಷ್ಟಪಡಿಸಿದೆ.
ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಪ್ರಕರಣ ಎಂದು ಪರಿಗಣಿಸಿ, ಈ ನೋಟಿಸ್ ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಶಿಸ್ತು ಸಮಿತಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಬೆಳವಣಿಗೆ ಶಿಡ್ಲಘಟ್ಟ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ, ರಾಜ್ಯ ಕಾಂಗ್ರೆಸ್ ವಲಯದಲ್ಲೂ ಸಂಚಲನ ಮೂಡಿಸಿದೆ.



