ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರ ಸಹ ಶಿಕ್ಷಕಿ ರತ್ನಾ ಬಬಲಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ‘ರಾಷ್ಟ್ರ ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹುಬ್ಬಳ್ಳಿಯ ಬೆಳಕು ಸಾಹಿತಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಆಯೋಜಿಸಿದ್ದ 125ನೇ ಬೆಳಕು ಸಮ್ಮೇಳನದಲ್ಲಿ ಅಕ್ಷರದವ್ವ ಲೂಸಿ ಸಾಲ್ಡಾನ ದತ್ತಿ ಪ್ರಶಸ್ತಿ ಅಡಿಯಲ್ಲಿ ಈ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವು ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ, ಬೆಳಕು ಟ್ರಸ್ಟ್ ನಾಡಿನ ಶಿಕ್ಷಕರು, ಸಾಧಕರು ಹಾಗೂ ರೈತರನ್ನು ಗುರುತಿಸಿ ಗೌರವಿಸುವ ಮೂಲಕ ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಯ ಉಳಿವು-ಬೆಳೆವಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಇಂತಹ ಸಮ್ಮೇಳನಗಳು ಸಾಧಕರಿಗೆ ಮತ್ತಷ್ಟು ಪ್ರೇರಣೆ ನೀಡುತ್ತವೆ ಎಂದು ಹೇಳಿದರು.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ವಿ.ವಿ. ಶಿವರುದ್ರಯ್ಯ, ಬೆಳಕು ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಮಹಿಳಾ ಘಟಕದ ಗೌರವಾಧ್ಯಕ್ಷೆ ನಿರ್ಮಲಾ ಯಲಿಗಾರ, ಕೆ.ಪಿ. ಸುಜಾತಾ, ಎಲ್.ಐ. ಲಕ್ಕಮ್ಮನವರ, ಮಂಜುನಾಥ ಮಟ್ಟಿ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



