ಬೆಂಗಳೂರು: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು.
ಸುಲಭ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ 15.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿ ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ ಉತ್ತಮ ನೆಟ್ ರನ್‌ರೇಟ್ ಸಹಾಯದಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಪಂದ್ಯದಲ್ಲಿ ಆರ್‌ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 49 ರನ್ ಬಾರಿಸಿದ್ದರು. ಈ 49 ರನ್ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಇಂತಹದೊಂದು ಭರ್ಜರಿ ದಾಖಲೆ ಇಂಗ್ಲೆಂಡ್ನ ಜೇಮ್ಸ್ ವಿನ್ಸ್ ಹೆಸರಿನಲ್ಲಿತ್ತು. ಸೌತಂಪ್ಟನ್ನ ರೋಸ್ ಬೌಲ್ ಮೈದಾನದಲ್ಲಿ 117 ಇನಿಂಗ್ಸ್ಗಳಲ್ಲಿ 3585 ರನ್ ಕಲೆಹಾಕುವ ಮೂಲಕ ಜೇಮ್ಸ್ ವಿನ್ಸ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಗ್ರೌಂಡ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈವರೆಗೆ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕೊಹ್ಲಿ ಬರೋಬ್ಬರಿ 3750+ ರನ್ ಗಳಿಸಿದ್ದಾರೆ. ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.



