ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿರುವ ಸಂದರ್ಭದಲ್ಲೇ ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಇ-ಮೇಲ್ ಮೂಲಕ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1 ಗಂಟೆಗೆ ಸ್ಫೋಟ ಸಂಭವಿಸುವ ಸಾಧ್ಯತೆ ಇದೆ ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದ್ದು,
ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಾಂಬ್ ಬೆದರಿಕೆ ಮೇಲ್‌ನಲ್ಲಿ ನಟ ಅಜಿತ್ ಕುಮಾರ್ ಹೆಸರನ್ನೂ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕು ಕಚೇರಿ ಸುತ್ತಮುತ್ತಲ ಪ್ರದೇಶವನ್ನು ಖಾಲಿ ಮಾಡಿಸಿ ಭದ್ರತೆ ಹೆಚ್ಚಿಸಲಾಗಿದೆ. ಘಟನೆಯ ಹಿನ್ನೆಲೆ ಮೇಲ್ ಕಳುಹಿಸಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದು, ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.



