ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ತೀವ್ರಗೊಳಿಸಿದ್ದು, ಈ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿದೆ. ಅಂದಿನ ತನಿಖಾಧಿಕಾರಿಗಳ ವಿಚಾರಣೆಯ ಬೆನ್ನಲ್ಲೇ ಇದೀಗ ಕೆಳಹಂತದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಎಸ್ಐಟಿ ಮುಂದಾಗಿದೆ.
ಸೌಜನ್ಯ ಪ್ರಕರಣದ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಸಬ್ ಇನ್ಸ್ಪೆಕ್ಟರ್ (ಎಸ್ಐ), ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ), ಪೊಲೀಸ್ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಹಾಗೂ ರೈಟರ್ಗಳು ಸೇರಿದಂತೆ ಸುಮಾರು ಎಂಟು ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಸ್ಐಟಿ ನೋಟಿಸ್ ನೀಡಿದೆ. ನೋಟಿಸ್ ಪಡೆದವರ ವಿಚಾರಣೆ ಇಂದು ನಡೆಯಲಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಮರುತನಿಖೆಯಲ್ಲಿ ಯಾವುದೇ ಮಹತ್ವದ ಮಾಹಿತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರುವ ಎಸ್ಐಟಿ, ಹಿಂದಿನ ತನಿಖೆಯ ಪ್ರತಿಯೊಂದು ಹಂತವನ್ನೂ ಪರಿಶೀಲಿಸಲು ಮುಂದಾಗಿದೆ. ಈ ಹಿಂದೆ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳು, ದಾಖಲಿಸಲಾಗಿದ್ದ ಹೇಳಿಕೆಗಳು ಹಾಗೂ ತನಿಖೆಯ ಸಂದರ್ಭದಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಮಾಹಿತಿ ಪಡೆಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಈಗಾಗಲೇ ಅಂದಿನ ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಎಸ್ಐಟಿ, ಮುಂದಿನ ಹಂತದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಫೊರೆನ್ಸಿಕ್ ತಜ್ಞರು ಹಾಗೂ ವೈದ್ಯರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ವೈಜ್ಞಾನಿಕ ಸಾಕ್ಷ್ಯಗಳ ಸಂಗ್ರಹ, ವೈದ್ಯಕೀಯ ವರದಿಗಳು ಹಾಗೂ ಹಿಂದಿನ ತನಿಖೆಯಲ್ಲಿ ದಾಖಲಾದ ಮಾಹಿತಿಗಳ ಕುರಿತು ಹೆಚ್ಚಿನ ಸ್ಪಷ್ಟತೆ ಪಡೆಯಲು ತನಿಖಾ ತಂಡ ಮುಂದಾಗಿದೆ.
ಸೌಜನ್ಯ ಪ್ರಕರಣದ ಮರುತನಿಖೆ ಪೂರ್ಣಗೊಳಿಸಲು ಸುಮಾರು 50ರಿಂದ 60 ದಿನಗಳು ಮಾತ್ರ ಬಾಕಿ ಉಳಿದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ವೇಗ ನೀಡಿರುವ ಎಸ್ಐಟಿ, ಪ್ರಕರಣದ ಹಿಂದಿನ ತನಿಖೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತುರ್ತಾಗಿ ವಿಚಾರಣೆಗೆ ಕರೆಯುತ್ತಿದೆ.










