ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳೊಂದಿಗೆ ಆಗಮಿಸಿದ್ದಾರೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಬ್ಯಾಗ್ ತುಂಬಾ ದಾಖಲೆಗಳೊಂದಿಗೆ ಎಸ್‌ಐಟಿ ಕಚೇರಿಗೆ ಬಂದಿದ್ದಾರೆ.
ಸೌಜನ್ಯ ಪ್ರಕರಣದ ವಿಚಾರವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣನವರ್, ತಮ್ಮ ಬಳಿ ಇರುವ ಮಾಹಿತಿ, ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.
ರಿಟ್ ಅರ್ಜಿ ವಜಾ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಂ ನಂಬರ್ 39/2026ರ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಅವರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.
ಪ್ರಕರಣದ ಹಿನ್ನೆಲೆ ಏನು?
ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪದೊಂದಿಗೆ ಮುಸುಕುಧಾರಿ ವ್ಯಕ್ತಿಯೊಬ್ಬ ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಎಸ್‌ಐಟಿ ತನಿಖೆ ಆರಂಭಿಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಹೇಳಿಕೆಗಳು, ಪತ್ತೆಯಾದ ತಲೆಬುರುಡೆ ಹಾಗೂ ಇತರ ಸಾಕ್ಷ್ಯಗಳ ಮೂಲ ಮತ್ತು ಘಟನೆಗಳ ಹಿನ್ನೆಲೆಯನ್ನು ಪರಿಶೀಲಿಸಿತ್ತು.
ಎಸ್‌ಐಟಿ ವರದಿಯಲ್ಲಿ ಷಡ್ಯಂತ್ರದ ಆರೋಪ
ತನಿಖೆಯ ವೇಳೆ ಮೂಲ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಬದಲಾವಣೆಗಳು ಕಂಡುಬಂದಿದ್ದವು ಎಂದು ವರದಿಯಾಗಿದೆ. ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿಂದೆ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದಾಗಿ ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.
ಈ ಸಂಬಂಧ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣ, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ನಕಲಿ ದಾಖಲೆ ತಯಾರಿಕೆ ಹಾಗೂ ಇತರ ಅಪರಾಧಗಳಿಗೆ ಸಂಬಂಧಿಸಿದ ಆರೋಪಗಳನ್ನು ಎಸ್‌ಐಟಿ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.
ಸೌಜನ್ಯ ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಇದೀಗ ಎಸ್‌ಐಟಿ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಸಂಬಂಧಪಟ್ಟವರ ವಿಚಾರಣೆ ಮುಂದುವರಿಯುವ ನಿರೀಕ್ಷೆಯಿದೆ.









