ಮಡಿಕೇರಿ:- 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕೊಡಗಿನ ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ.
ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಸಾರಿಗೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೂ ಗಮನ ಹರಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. ಸಂಜೆ ವೇಳೆಯಲ್ಲಿ ವಿಶೇಷ ತರಗತಿ ನಡೆಸಿ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ. ಒಟ್ಟಾರೆ ಸರ್ಕಾರಿ ಶಾಲೆಗಳ ಸುಧಾರಣೆ ಮತ್ತು ಬೆಳವಣಿಗೆಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ ಎಂದು ಹೇಳಿದ್ದಾರೆ.


