ಬೆಂಗಳೂರು: ನಗರದ ಚಂದ್ರಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಿಹ್ಯಾಬ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದವರನ್ನು ಶಿವಲಿಂಗಯ್ಯ (62) ಎಂದು ಗುರುತಿಸಲಾಗಿದೆ. ಅವರು ಕಳೆದ ಹಲವು ವರ್ಷಗಳಿಂದ ಚಂದ್ರಲೇಔಟ್‌ನ ಬಿಸಿಸಿ ಲೇಔಟ್ ಪ್ರದೇಶದಲ್ಲಿ ರಿಹ್ಯಾಬ್ ಸೆಂಟರ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಇಂದು ಬೆಳಗಿನ ಜಾವ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಶಿವಲಿಂಗಯ್ಯ ಅವರನ್ನು ಹತ್ಯೆ ಮಾಡಲಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ರಿಹ್ಯಾಬ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಸನಿಯೊಬ್ಬನೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಘಟನೆಯ ನಿಖರ ಕಾರಣ ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಚಂದ್ರಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗಾಗಿ ವಿಶೇಷ ಶೋಧ ಕಾರ್ಯ ಆರಂಭಿಸಲಾಗಿದೆ.
ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



