ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಬೆನ್ನುನೋವಿನ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಜೈಲಿನಲ್ಲಿಯೇ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ವೈದ್ಯಾಧಿಕಾರಿಗಳು ತೀರ್ಮಾನಿಸಿದರೆ ಮಾತ್ರ ದರ್ಶನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಜೈಲಿನಲ್ಲಿರುವ ನುರಿತ ವೈದ್ಯರಿಂದಲೇ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ.
ನಿನ್ನೆಯಷ್ಟೇ ದರ್ಶನ್ ಅವರ ಚಿಕಿತ್ಸೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಮಹತ್ವದ ಆದೇಶ ನೀಡಿದ್ದರು. ಅಧಿಕಾರಿಗಳು ಸಲ್ಲಿಸಿದ್ದ ವರದಿ ಹಾಗೂ ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ನೋವು ಉಪಶಮನಕ್ಕೆ ಅಗತ್ಯವಾದ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ಅಗತ್ಯವಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಬಹುದು ಎಂದು ನಿರ್ದೇಶನ ನೀಡಿದ್ದರು.
ನ್ಯಾಯಾಲಯದ ಈ ಆದೇಶದಿಂದ ದರ್ಶನ್ ಅವರು ತಾವು ಇಚ್ಛಿಸಿದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶ ಸದ್ಯಕ್ಕೆ ಇಲ್ಲದಂತಾಗಿದೆ. ಬದಲಾಗಿ, ಕೋರ್ಟ್ ಸೂಚಿಸಿರುವಂತೆ ಅಗತ್ಯಬಿದ್ದರೆ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನ ವೈದ್ಯಾಧಿಕಾರಿಗಳು ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರಿಸುವ ಬಗ್ಗೆ ಗಮನಹರಿಸಿದ್ದಾರೆ. ದರ್ಶನ್ ಅವರಿಗೆ ಇಂಜೆಕ್ಷನ್ ನೀಡುವ ವಿಚಾರವಾಗಿಯೂ ವೈದ್ಯರು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಇದೇ ವೇಳೆ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿಗಳಾದ ಪವನ್, ಧನರಾಜು, ರಾಘವೇಂದ್ರ, ವಿನಯ್ ಹಾಗೂ ನಂದೀಶ್ ಅವರ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಜಾಮೀನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲು ತೀರಾ ವಿಳಂಬ ಮಾಡಲಾಗಿದೆ ಎಂಬ ಕಾರಣ ನೀಡಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಈ ಐವರು ಆರೋಪಿಗಳಿಗೆ ಸದ್ಯಕ್ಕೆ ನಿರಾಳತೆ ಸಿಕ್ಕಂತಾಗಿದೆ.
ಒಂದೆಡೆ ದರ್ಶನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ವಿಚಾರದಲ್ಲಿ ಬೆಳವಣಿಗೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರಕರಣದ ಐವರು ಆರೋಪಿಗಳ ಜಾಮೀನು ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿರುವುದು ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ.







