ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ಡಾ. ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯ ದಲ್ಲಿರುವ ತಮ್ಮ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಅಶೋಕನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ಹಿಂದಿನ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಡಾ. ರಾಯ್ ಅವರ ಕುಟುಂಬದ ಮೇಲೆ ಪದೇಪದೇ ಆದಾಯ ತೆರಿಗೆ ಇಲಾಖೆ ದಾಳಿಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಎಲ್ಲ ಅಂಶಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
2005ರಲ್ಲಿ ಆರಂಭವಾದ ಕಾನ್ಫಿಡೆಂಟ್ ಗ್ರೂಪ್ ಇದುವರೆಗೆ 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್ಗಳು, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



