ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸಾಹಿತಿ ಡಾ. ಮೊಗಳ್ಳಿ ಗಣೇಶ್ ನಿಧನ ಹೊಂದಿದ್ದಾರೆ.
ಮೊಗಳ್ಳಿ ಗಣೇಶ್ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದರು. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕನ್ನಡದ ಖ್ಯಾತ ಕಥೆಗಾರ ,ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೊಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನ ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.



