ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಹೈಕೋರ್ಟ್ ನಲ್ಲಿ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿಯ ಎಲ್ಲ ಆರೋಪಿಗಳಿಗೆ ಜಾಮೀನು ದೊರೆತಿದೆ. ಇದೀಗ ಪೊಲೀಸರು, ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆದಿದೆ.
ಇದೀಗ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳಾದ ಪವಿತ್ರಾ ಗೌಡ, ಜಗದೀಶ್, ಅನುಕುಮಾರ್, ನಾಗರಾಜ, ಎಂ ಲಕ್ಷ್ಮಣ್, ಪ್ರದೋಶ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು.
ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ‘ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ’ ಎಂದು ಮನವಿ ಮಾಡಿದ್ದಾರೆ.
7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ‘ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ’ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.