HomeKarnataka Newsರೇಣುಕಾಸ್ವಾಮಿ ಕೊಲೆ ಕೇಸ್: ಖುದ್ದು ಹಾಜರಾತಿಗೆ ದರ್ಶನ್ ಮನವಿ, ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಕೇಸ್: ಖುದ್ದು ಹಾಜರಾತಿಗೆ ದರ್ಶನ್ ಮನವಿ, ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

For Dai;y Updates Join Our whatsapp Group

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿರುವ ಬೆನ್ನಲ್ಲೇ, ವಿಚಾರಣೆಗೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದೆ. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ.

ಸೆಪ್ಟೆಂಬರ್ 10ರಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿ, ಸಾಕ್ಷ್ಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಆರೋಪಿಗಳಿಗೆ ಖುದ್ದು ಹಾಜರಾಗಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವಾಗ ತಾಂತ್ರಿಕ ಕಾರಣಗಳಿಂದ ಸೂಕ್ತ ಸಂವಹನ ಸಾಧ್ಯವಾಗುತ್ತಿಲ್ಲ. ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಯುವ ಸಂದರ್ಭದಲ್ಲಾದರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಬೇಕು ಎಂದು ಅವರು ವಾದಿಸಿದರು.

ಈ ವೇಳೆ ನ್ಯಾಯಾಧೀಶರು, ವಿಡಿಯೋ ಕಾನ್ಫರೆನ್ಸ್‌ನಲ್ಲೇ ಆರೋಪಿ ಮತ್ತು ವಕೀಲರ ನಡುವೆ ಖಾಸಗಿ ಮಾತುಕತೆಗೆ ವ್ಯವಸ್ಥೆ ಮಾಡಬಹುದು ಎಂದು ಹೇಳಿದರು. ಕೋರ್ಟ್ ಕಲಾಪ ಆರಂಭವಾಗುವುದಕ್ಕೂ 15 ನಿಮಿಷ ಮುನ್ನ ಆರೋಪಿಗಳು ತಮ್ಮ ವಕೀಲರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದಾಗಿ ಕರೆತರಬೇಕಾದರೆ ಪೊಲೀಸರ ಭದ್ರತೆ ಒದಗಿಸಬೇಕಾಗುತ್ತದೆ. ಅಲ್ಲದೆ, ಜನದಟ್ಟಣೆಯನ್ನು ನಿಯಂತ್ರಿಸುವುದು ಕಷ್ಟವಾಗಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಬೇಕಿದ್ದರೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕೋರ್ಟ್ ವ್ಯವಸ್ಥೆ ಮಾಡಬಹುದು ಅಥವಾ ಅಲ್ಲಿಯೇ ವಿಚಾರಣೆ ನಡೆಸುವಂತೆ ಸೂಚನೆ ನೀಡಬಹುದು ಎಂದು ನ್ಯಾಯಾಧೀಶರು ತಿಳಿಸಿದರು. ಖುದ್ದು ಹಾಜರಾತಿಗಿಂತ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದು ಹೆಚ್ಚು ಪರಿಣಾಮಕಾರಿಯಾಗಬಹುದು ಎಂದೂ ಅಭಿಪ್ರಾಯಪಟ್ಟರು.

ಟ್ರಯಲ್ ಪ್ರಕ್ರಿಯೆಯನ್ನು ಸೌಹಾರ್ದಯುತವಾಗಿ ಪೂರ್ಣಗೊಳಿಸುವ ಅಗತ್ಯವಿದೆ. ಎರಡೂ ಕಡೆಯ ವಕೀಲರು ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರುವಂತೆ ನ್ಯಾಯಾಲಯ ಸೂಚಿಸಿದೆ. ಪ್ರತಿಯೊಂದು ವಿಚಾರಣೆಯಲ್ಲೂ ಆರೋಪಿಗಳ ಖುದ್ದು ಹಾಜರಾತಿ ಅಗತ್ಯವಿಲ್ಲ. ಕ್ರಾಸ್ ಎಕ್ಸಾಮಿನೇಷನ್ ಯಾವಾಗ ನಡೆಯಲಿದೆ ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲರ ವಾದವೇನು?

ಸಾಕ್ಷ್ಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಆರೋಪಿಗೆ ಖುದ್ದು ಹಾಜರಾಗುವ ಅವಕಾಶ ನೀಡಬೇಕು. ಸಾಕ್ಷ್ಯವನ್ನು ನೇರವಾಗಿ ಆಲಿಸುವುದು ಹಾಗೂ ವೀಕ್ಷಿಸುವುದು ಆರೋಪಿಯ ಹಕ್ಕು ಎಂದು ದರ್ಶನ್ ಪರ ವಕೀಲರು ವಾದಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಮತ್ತು ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್‌ಗೆ ಅಗತ್ಯವಿರುವ ಸೂಕ್ತ ಉಪಕರಣಗಳಿಲ್ಲ. ತಾಂತ್ರಿಕ ವ್ಯವಸ್ಥೆಗಳನ್ನು ಇನ್ನೂ ಸಮರ್ಪಕವಾಗಿ ಉನ್ನತೀಕರಿಸಲಾಗಿಲ್ಲ. ಈ ಕಾರಣದಿಂದ ಕಾಲಕಾಲಕ್ಕೆ ತಮ್ಮ ವಕೀಲರಿಗೆ ಸೂಕ್ತ ಸೂಚನೆಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಡಿಯೋ ಕಾನ್ಫರೆನ್ಸ್‌ನಲ್ಲೂ ತಾಂತ್ರಿಕ ಅಡಚಣೆಗಳು ಎದುರಾಗುತ್ತಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಿಚಾರಣೆಗೆ ಖುದ್ದು ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಸೆಷನ್ಸ್ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದ ಬಳಿಕ ದರ್ಶನ್ ಪರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img