ಬೆಂಗಳೂರು: ದಸರಾ ರಜೆ ಮುಗಿಸಿ ಜನರು ರಾಜಧಾನಿ ಬೆಂಗಳೂರಿನತ್ತ ಮರಳುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರವೇಶ ಮಾರ್ಗಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.
ವಿಶೇಷವಾಗಿ ನೆಲಮಂಗಲ ಬೈಪಾಸ್ ಹಾಗೂ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಭಾಗಗಳಿಗೆ ದಸರಾ ರಜೆಗಾಗಿ ತೆರಳಿದ್ದವರು ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಒಂದೇ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿದಿರುವುದರಿಂದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿಧಾನಗೊಂಡಿದೆ. ನೆಲಮಂಗಲ ಬೈಪಾಸ್ನಲ್ಲಿ ವಾಹನಗಳ ಉದ್ದನೆಯ ಸಾಲು ಕಂಡುಬಂದಿದ್ದು, ವಾಹನ ಸವಾರರು ನಿಗದಿತ ಸಮಯಕ್ಕೆ ತಮ್ಮ ಗಮ್ಯಸ್ಥಾನ ತಲುಪಲು ತೊಂದರೆ ಅನುಭವಿಸುತ್ತಿದ್ದಾರೆ.
ನಾಳೆ ಟ್ರಾಫಿಕ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ:
ಅಕ್ಟೋಬರ್ 22ರ ನಸುಕಿನಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಸ್ಗಳು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ. ಇದರಿಂದ ನಗರದ ಪ್ರವೇಶ ಮಾರ್ಗಗಳಲ್ಲಿ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ದಸರಾ ರಜೆ ಮುಗಿದ ಬೆನ್ನಲ್ಲೇ ಬೆಂಗಳೂರಿಗೆ ಮರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಪ್ರಯಾಣಿಕರು ಸಂಚಾರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜಿಸಬೇಕಿದೆ. ಪ್ರಮುಖ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ ವಾಹನ ಸವಾರರು ತಾಳ್ಮೆಯಿಂದ ಚಾಲನೆ ಮಾಡುವುದು ಅಗತ್ಯವಾಗಿದೆ.










