ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲೆಯ ಡಿ.ಸಿ., ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ `ಕೃಷ್ಣಾ’ದಿಂದ ವಿಡಿಯೋ ಸಂವಾದ ನಡೆಸಿ, ರಾಜ್ಯದ ಎಲ್ಲಾ ಡಿ.ಸಿ, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಡಿ.ಸಿ., ಜಿಲ್ಲಾ ಪಂಚಾಯತ್ ಸಿಇಓ ಇದರ ಮೇಲುಸ್ತುವಾರಿ ವಹಿಸಬೇಕು ಎಂದರು.
ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದ್ದು, ಜಿಲ್ಲಾ, ತಾಲೂಕಿಗೆ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ರೂಪಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ಕುರಿತು ರೈತರಿಂದ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಹಾವೇರಿಯಲ್ಲಿ ಬಿತ್ತನೆ ಬೀಜಕ್ಕೆ ಜನ ಸಾಲುಗಟ್ಟಿ ನಿಂತಿರುವುದು ಮಾಧ್ಯಮಗಳ ಮುಖಾಂತರ ತಿಳಿದುಬಂದಿದೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನಗಳು ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕು. ನೀರು ಪೂರೈಕೆಗೂ ಮುನ್ನ ಅದು ಕುಡಿಯಲು ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದ್ದು, ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕ ಇದೆ. ಬಿತ್ತನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆಗಳಿಂದ 22 ಸಾವಿರ ರೈತರಿಗೆ ಪರಿಹಾರ ಧನ ಬಾಕಿ ಇತ್ತು. ಇದರಲ್ಲಿ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದು, ಇನ್ನುಳಿದ ಸಮಸ್ಯೆಗಳನ್ನು ಸಹ ಮುಂದಿನ 2-3 ದಿನದಲ್ಲಿ ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿ.ಎಂ ಅವರ ಗಮನಕ್ಕೆ ತಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಸಿ.ಎಂ ಅವರೊಂದಿಗೆ ಭಾಗಿಯಾಗಿದ್ದರು.
ಗದಗ ಜಿಲ್ಲೆಯಿಂದ ಡಿ.ಸಿ ಅವರೊಂದಿಗೆಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಸುರೇಖಾ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಸೇರಿ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳ ಸಂಖ್ಯೆಯ ಕಡೆಗೆ ಅಧಿಕಾರಿಗಳು ಗಮನಹರಿಸಬೇಕು. ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿರುವ ಕುರಿತು ಮನವರಿಕೆ ಅಗತ್ಯವಾಗಿದೆ ಎಂದರು.
ಪರಿಹಾರ ವಿತರಣೆ ಮಾಡುವಾಗ ಪ್ರತಿಯೊಬ್ಬ ರೈತರ ಹೊಲದಲ್ಲಿಯೂ ಕ್ರಾಪ್ ಸರ್ವೇ ಲಿಂಕ್ ಮಾಡಲಾಗಿದೆ. 5591 ಫಲಾನುಭವಿಗಳ ಆಧಾರ ಮತ್ತು ಬ್ಯಾಂಕ್ ಖಾತೆ, ಫ್ರೂಟ್ಸ್ ಐಡಿಗಳಲ್ಲಿ ಹೆಸರಿನ ವ್ಯತ್ಯಾಸ ಮತ್ತು ಇತರೆ ಕಾರಣದಿಂದಾಗಿ ಪರಿಹಾರ ಜಮೆ ಆಗದೇ ಇದ್ದು ಅವುಗಳನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. 2023ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ ಒಟ್ಟಾರೆ 1,13,778 ಫಲಾನುಭವಿಗಳಿಗೆ 1ರಿಂದ 10 ಹಂತದವರೆಗೆ 110 ಕೋಟಿ ರೂ ಬೆಳೆ ಹಾನಿ ಪರಿಹಾರ ಧನ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ವಿವರಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಮೇ ತಿಂಗಳಲ್ಲಿ ಬಿತ್ತನೆ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ. 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದರು.