ಗದಗ: ನಗರದ ಧೋಬಿಘಾಟ್ ಸಮೀಪದ ಬಾರ್‌ವೊಂದರ ಮುಂದೆ ಕ್ಷುಲ್ಲಕ ವಿಚಾರಕ್ಕೆ ಐವರು ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆ ಬಿಡಿಸಲು ಮುಂದಾದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆಯೂ ಹಲ್ಲೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೂಲಗಳ ಪ್ರಕಾರ, ಸಣ್ಣ ವಿಚಾರಕ್ಕೆ ಆರಂಭವಾದ ವಾಗ್ವಾದ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ರಸ್ತೆಯ ಮಧ್ಯದಲ್ಲೇ ಯುವಕರು ಹೊಡೆದಾಡಿಕೊಂಡ ಪರಿಣಾಮ ಸ್ಥಳದಲ್ಲಿ ಜನರು ಜಮಾಯಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ವೇಳೆ ಅಲ್ಲಿಂದ ತೆರಳುತ್ತಿದ್ದ ಕರ್ತವ್ಯದಲ್ಲಿರದ ಪೊಲೀಸ್ ಕಾನ್ಸ್‌ಟೇಬಲ್ ಅಶೋಕ್ ಪಾಟೀಲ್ ಘಟನೆ ಗಮನಿಸಿ ತಕ್ಷಣ ಮಧ್ಯಪ್ರವೇಶಿಸಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಎರಡು ಗುಂಪುಗಳನ್ನು ಸಮಾಧಾನಪಡಿಸಲು ಯತ್ನಿಸಿದರೂ, ಪುಡಿರೌಡಿಗಳು ಗಲಾಟೆ ನಿಲ್ಲಿಸುವ ಬದಲು ಅವರನ್ನೇ ನೂಕಾಡಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಕಾನ್ಸ್‌ಟೇಬಲ್‌ಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಆದಾಗ್ಯೂ, ಅವರು ಸಮಯಪ್ರಜ್ಞೆ ಮೆರೆದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಹಾಗೂ ಸಾರ್ವಜನಿಕ ಶಾಂತಿ ಭಂಗಗೊಳಿಸಿದ ಆರೋಪದಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಹಾಗೂ ಸಾರ್ವಜನಿಕ ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ, ಘಟನೆಯ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರ ಸಮ್ಮುಖದಲ್ಲೇ ನಡೆದ ಈ ಪುಂಡಾಟ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಕರ್ತವ್ಯದಲ್ಲಿರದಿದ್ದರೂ ಧೈರ್ಯ, ಸಮಯಪ್ರಜ್ಞೆ ಹಾಗೂ ಕರ್ತವ್ಯನಿಷ್ಠೆ ಮೆರೆದು ಗಲಾಟೆಯನ್ನು ನಿಯಂತ್ರಣಕ್ಕೆ ತಂದ ಕಾನ್ಸ್‌ಟೇಬಲ್ ಅಶೋಕ್ ಪಾಟೀಲ್ ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



