ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರೌಡಿಗಳ ಅಟ್ಟಹಾಸ ಮತ್ತೆ ಮುನ್ನೆಲೆಗೆ ಬಂದಿದೆ.
ಹಾಡಹಗಲೇ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿರುವ ಪುಂಡರು, ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರು ಜೀವ ಬೆದರಿಕೆ ಹಾಕಿರುವ ಘಟನೆ ಆತಂಕ ಮೂಡಿಸಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಶ್ಯಾಮ್ ಜಾಧವ್ ಕುಟುಂಬ ಹಾಗೂ ಸ್ಥಳೀಯ ನಿವಾಸಿ ಬಸವರಾಜ್ ಜಾಧವ್ ಕುಟುಂಬದ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಕೆಲವರು ಲಾಂಗ್ ಮತ್ತು ಮಚ್ಚುಗಳನ್ನು ಹಿಡಿದು ರಸ್ತೆಯಲ್ಲಿ ಪ್ರದರ್ಶಿಸಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ.
ಇನ್ನು ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಸಂಘರ್ಷ ಮಾತ್ರ ನಿಂತಿಲ್ಲ ಎನ್ನಲಾಗಿದೆ. ಠಾಣೆಯಲ್ಲಿಯೇ ಪೊಲೀಸರ ಎದುರು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ಬಸವರಾಜ್ ಜಾಧವ್ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಶ್ಯಾಮ್ ಜಾಧವ್ ಕುಟುಂಬದವರು ಸಣ್ಣಪುಟ್ಟ ವಿಚಾರಗಳಿಗೂ ಗಲಾಟೆ ತೆಗೆದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಈಗ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ನಮಗೆ ಜೀವಭಯವಿದ್ದು, ಪೊಲೀಸರು ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಘಟನೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದಕ್ಷಿಣ ವಿಭಾಗದ ಎಸಿಪಿ ಯು.ಬಿ. ಚಿಕ್ಕಮಠ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಸೆಟ್ಲ್ಮೆಂಟ್ ಏರಿಯಾದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಪೊಲೀಸ್ ಬಸ್ಗಳನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.









