ಬೆಂಗಳೂರು: ಕರ್ನಾಟಕ ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂ. ಲಂಚ ಹಗರಣ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಈ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಪರವಾನಗಿಗಳನ್ನು ಹರಾಜು ಮಾಡಲಾಗುತ್ತಿದ್ದು, ಇದರಿಂದ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿರುವುದು ಇದಕ್ಕೆ ಸಾಕ್ಷಿ ಎಂದರು.
ಈ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಗಾರರು ಎಂದು ಹೇಳಿದ ಅಶೋಕ್, ತಿಮ್ಮಾಪುರ ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿಯನ್ನೇ ಹೊಣೆಗಾರರನ್ನಾಗಿ ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.



