ನೆಲಮಂಗಲ :-ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ರಸ್ತೆ ದುರಸ್ತಿ ವಿಚಾರದಿಂದ ಎರಡು ಕುಟುಂಬಗಳ ನಡುವೆ ಗಲಾಟೆ ಉಂಟಾಗಿ, ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ.
ಗ್ರಾಮದ ರಸ್ತೆಯಲ್ಲಿ ಮಳೆಯಿಂದಾಗಿ ಗುಂಡಿಗಳು ಉಂಟಾಗಿ ಜನ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಇದರಿಂದ ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ರಸ್ತೆ ಸರಿ ಮಾಡುವ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ರಸ್ತೆ ದುರಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಜಗಳ ಶುರುವಾಗಿದೆ.
ಗಲಾಟೆ ತೀವ್ರಗೊಂಡ ಪರಿಣಾಮ ಪ್ರೇಮ್ ಕುಮಾರ್, ಜಯಮ್ಮ ಹಾಗೂ ಮಹಿಮೆಗೌಡ ಎಂಬವರು ದೊಣ್ಣೆ ಹಾಗೂ ಕಲ್ಲುಗಳಿಂದ ನಾಗರತ್ನಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ.
ಗಾಯಗೊಂಡ ನಾಗರತ್ನಮ್ಮ ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ದುರಸ್ತಿ ಮಾಡಲು ಬಿಡದಂತೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


