HomeBengaluru Newsರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರಿಗೆ ಹವಾಮಾನ ತಜ್ಞರ ಭರವಸೆ!

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರಿಗೆ ಹವಾಮಾನ ತಜ್ಞರ ಭರವಸೆ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳ ನಡುವೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ರೈತರಿಗೆ ನೆಮ್ಮದಿ ನೀಡುವ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ತೀವ್ರ ಬರಗಾಲ ಉಂಟಾಗುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಗಮನಾರ್ಹ ತೊಂದರೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ, ರಾಜ್ಯದಲ್ಲಿ ಭೀಕರ ಬರಗಾಲ ಬರುತ್ತದೆ ಹಾಗೂ ಶೇಕಡಾ 64ರಷ್ಟು ಮಳೆ ಕೊರತೆಯಾಗುತ್ತದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ. ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಶೇಕಡಾ 4ರಿಂದ 8ರಷ್ಟು ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇದ್ದರೂ, ಅದು ಕೃಷಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟುಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

1964-65ರಲ್ಲಿ ದೇಶದಲ್ಲಿ ಶೇಕಡಾ 28ರಷ್ಟು ಮಳೆ ಕೊರತೆಯಾಗಿದ್ದ ಸಂದರ್ಭದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗಿನ ಪರಿಸ್ಥಿತಿ ಅದಕ್ಕಿಂತ ಭಿನ್ನವಾಗಿದ್ದು, ಅಷ್ಟು ದೊಡ್ಡ ಪ್ರಮಾಣದ ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಲ್ ನಿನೋ ಪ್ರಭಾವವು ನಾಲ್ಕು ವರ್ಷಗಳಿಗೊಮ್ಮೆ ಕಂಡುಬರುವ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದ್ದು, ಮಳೆಯ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ರಾಜೇಗೌಡ ಹೇಳಿದ್ದಾರೆ. ಇದೇ ವೇಳೆ ವೆಸ್ಟರ್ನ್ ಡಿಸ್ಟರ್ಬೆನ್ಸ್ ಪ್ರಭಾವದಿಂದ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಬಿತ್ತನೆ ಕಾರ್ಯವೂ ಹೆಚ್ಚಾಗಿದೆ. ಕಳೆದ ಬಾರಿ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದರೆ, ಈ ಬಾರಿ ಅದು 17 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಇದರಿಂದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿ, ಕಳೆದ ವರ್ಷ ರಾಜ್ಯದಲ್ಲಿ ಸರಾಸರಿ ಶೇಕಡಾ 14ರಷ್ಟು ಅಧಿಕ ಮಳೆಯಾಗಿತ್ತು. ಆದರೆ ಈ ಬಾರಿ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಸರಾಸರಿ ಶೇಕಡಾ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಮಳೆ ಕೊರತೆಯ ಸಾಧ್ಯತೆ ಇದ್ದರೂ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗುವ ಭೀತಿ ಇಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದು, ರೈತ ಸಮುದಾಯಕ್ಕೆ ಧೈರ್ಯ ತುಂಬಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!