ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಅಸ್ತು

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.

Advertisement

ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡಲಾಯಿತು. ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಬೇಡಿಕೆಗಳಿಗನುಸಾರವಾಗಿ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ರೂ.880.68 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೆಟಿಪಿಪಿ ಕಾಯ್ದೆ 1999 ಹಾಗೂ ಕೆಟಿಪಿಪಿ ನಿಯಮ 2000ಗಳನ್ನು ಅನುಸರಿಸಿ ಟೆಂಡರ್ ಮೂಲಕ ಸಂಗ್ರಹಿಸಿ ಸರಬರಾಜು ಮಾಡಲು ಹಾಗೂ ಅಗತ್ಯವಿರುವ ಅನುದಾನವನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿತು.

ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 46 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸಲು ಹಾಗೂ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 3 ಶಿಕ್ಷಾ ಬಂಧಿಗಳನ್ನು ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಭಾರತ ಸಂವಿಧಾನದ ಅನುಚ್ಛೇದ-161ರ ಪ್ರಕಾರ ಅವಧಿಪೂರ್ವ ಬಿಡುಗಡೆಗೊಳಿಸಲು ಸಚಿವ ಸಂಪುಟ ನಿರ್ಣಯಿಸಿತು.

ರಂಗಶಂಕರ ಸಂಸ್ಥೆ ಗುತ್ತಿಗೆ ವಿಸ್ತರಣೆ, ಅಲ್ಲೀಪುರ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ, ಮದಗ-ಮಾಸೂರು ಕೆರೆ ಆಧುನೀಕರಣ, ನಂಜಾಪುರ ಏತ ನೀರಾವರಿ ಆಧುನೀಕರಣ, 18 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ, ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ, 215.37 ಕೋಟಿ ರೂ.ಗಳ ವೆಚ್ಚದಲ್ಲಿ ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿ, ಡಿ.ಕುನ್ಹಾ ವರದಿ ಅಂಗೀಕಾರ, ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲೂಕು ಮದಗ-ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಸೇರಿದಂತೆ ಇನ್ನೂ ಹಲವು ಯೋಜನೆಗಳಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತು.

ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮೊದಲು 1964ರ ಕಲಂ 15ಕ್ಕೆ ತಿದ್ದುಪಡಿ ತಂದು ನಂತರ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ ವಿಧಿಸಲು ಕ್ರಮವಹಿಸಲು ಪ್ರಸ್ತಾಪಿಸಲಾಯಿತು.


Spread the love

LEAVE A REPLY

Please enter your comment!
Please enter your name here