ವಿಜಯಸಾಕ್ಷಿ ಸುದ್ದಿ, ಗದಗ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವತಿಯಿಂದ ಜುಲೈ 13ರಂದು ಬೆಳಿಗ್ಗೆ 11.30ಕ್ಕೆ ನಗರದ ಕನಕ ಭವನದಲ್ಲಿ ಮಧ್ಯ ಕರ್ನಾಟಕ ಭಾಗದ ನಾಯಕರ ಮಹತ್ವದ ಸಮಾವೇಶ ನಡೆಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರಿಗೆ ಅಂದು ಮುಳುಗುಂದ ನಾಕಾ ವೃತ್ತದಲ್ಲಿ ಅದ್ದೂರಿ ಸ್ವಾಗತ ಕೋರಲಾಗುವುದು. ಸಮಾವೇಶದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಫಿ, ರಾಷ್ಟ್ರೀಯ ಕಾರ್ಯದರ್ಶಿ ಯು. ಮೊಹಿದ್ದೀನ್, ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಹನ್ನಾನ್, ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ.ಆರ್. ನಗರ ಹಾಗೂ ರಾಜ್ಯ ಸಮಿತಿ ಸದಸ್ಯ ಫಯಾಜ್ ಅರಿಹಂತ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 1.30ಕ್ಕೆ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ನೇತೃತ್ವದಲ್ಲಿ ಸುದ್ದಿಗೋಷ್ಠಿಯೂ ನಡೆಯಲಿದೆ ಎಂದು ತಿಳಿಸಿದರು.
ಈ ವೇಳೆ ಎಸ್ಐಆರ್ (Special Intensive Revision) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ ಅಪ್ಸರ್ ಕೊಡ್ಲಿಪೇಟೆ, ಇದು ಮತದಾರರ ಹಕ್ಕಿಗೆ ಧಕ್ಕೆ ತರುವ ಕ್ರಮವಾಗಿದ್ದು, ಸರ್ಕಾರ ಕೂಡಲೇ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಅಗತ್ಯವಿದ್ದರೂ ನೈಜ ಮತದಾರರ ಹೆಸರುಗಳನ್ನು ಕೈಬಿಡಬಾರದು ಎಂದು ಒತ್ತಾಯಿಸಿದರು.
ಬಿಎಲ್ಒಗಳ ಮೇಲಿನ ಹೆಚ್ಚುವರಿ ಕೆಲಸದ ಒತ್ತಡದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಜನರು ಜನವಿರೋಧಿ ನೀತಿಗಳಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ.ಆರ್. ನಗರ, ಜಿಲ್ಲಾ ಅಧ್ಯಕ್ಷ ಬಿಲಾಲ್ ಗೋಕಾವಿ, ಜಿಲ್ಲಾ ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ತರಫ್ದರ್, ಗದಗ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮುಸ್ತಾಕ್ ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



